ದೋಸ್ತಿ ಸರ್ಕಾರದ ಸೀಟು ಹಂಚಿಕೆ ಇಂದು ಫೈನಲ್..?

ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಕುರಿತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಬುಧವಾರ ದೆಹಲಿಯಲ್ಲಿ ಅಂತಿಮ ಮಾತುಕತೆ ನಡೆಸಲಿದ್ದಾರೆ. ದೆಹಲಿಯ ದೇವೇಗೌಡರ ನಿವಾಸಕ್ಕೆ ತೆರಳಿ ಚರ್ಚೆ ನಡೆಸುವ ರಾಹುಲ್​ಗಾಂಧಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಈಗಾಗಲೇ ಜೆಡಿಎಸ್​ ನಾಯಕರು 12 ಲೋಕಸಭೆ ಕ್ಷೇತ್ರಗಳಿಗೆ ಬೇಡಿಕೆ ಇಟ್ಟಿದ್ದಾರೆ. ದಕ್ಷಿಣ ಕರ್ನಾಟಕದಲ್ಲಿ ಮುಖ್ಯವಾಗಿ ಸೇರಿದಂತೆ ಕೆಲವು ಸ್ಥಾನಗಳಿಗೆ ದೇವೇಗೌಡರು ಪಟ್ಟುಹಿಡಿಯುವ ಸಾಧ್ಯತೆಯಿರುವುದರಿಂದ ಕಾಂಗ್ರೆಸ್ ನಾಯಕರ ಅಸಮಾಧಾನಕ್ಕೆ ಕಾರಣವಾಗುವ ಸಾಧ್ಯತೆಗಳು ಇವೆ.

ಮಂಡ್ಯ, ಮೈಸೂರು, ಹಾಸನ, ತುಮಕೂರು, ಬೆಂಗಳೂರು ಉತ್ತರ, ಶಿವಮೊಗ್ಗ, ಚಿಕ್ಕಮಗಳೂರು-ಉಡುಪಿ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳಿಗೆ ಜೆಡಿಎಸ್​ ಪಟ್ಟು ಹಿಡಿದಿದೆ. ಇನ್ನು ಸೀಟು ಹಂಚಿಕೆ ಸಂಬಂಧ ಈಗಾಗಲೇ 2 ಸುತ್ತಿನ ಚರ್ಚೆ ನಡೆಸಿರುವ ರಾಜ್ಯ ನಾಯಕರು ಇಂದು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.


ಕಾಂಗ್ರೆಸ್ ಸಂಸದರಿರುವ 4 ಕ್ಷೇತ್ರಗಳಿಗೆ ಜೆಡಿಎಸ್ ಕಣ್ಣಿಟ್ಟಿದ್ದು ತಮ್ಮ ಪಕ್ಷದ ಸಂಸದರಿರುವ ಕ್ಷೇತ್ರಗಳನ್ನು ಜೆಡಿಎಸ್ ಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಿಟ್ಟುಕೊಡ್ತಾರಾ ಅನ್ನೋದು ಕುತೂಹಲದ ಸಂಗತಿ. ಹಾಸನ, ಮಂಡ್ಯ ಲೋಕಸಭಾ ಕ್ಷೇತ್ರಗಳು ಮಾತ್ರವಲ್ಲದೆ, ಜೆಡಿಎಸ್ ಬೆಂಗಳೂರು ಉತ್ತರ, ಶಿವಮೊಗ್ಗ, ಮೈಸೂರು, ವಿಜಯಪುರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಚಿತ್ರದುರ್ಗ, ರಾಯಚೂರು ಮತ್ತು ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಕೂಡ ಜೆಡಿಎಸ್ ಗೆ ಟಿಕೆಟ್ ಬೇಕು ಎಂದು ದೇವೇಗೌಡರು ಒತ್ತಾಯಿಸಬಹುದು.

ಮೈತ್ರಿಯಿಂದ ತಮ್ಮ ಸ್ಥಾನಕ್ಕೆ ಯಾವುದೇ ಕುತ್ತು ಬರುವುದಿಲ್ಲ ಎಂದು ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಈಗಾಗಲೇ ಇರುವ ಕಾಂಗ್ರೆಸ್ ಸಂಸದರಿಗೆ ಭರವಸೆ ನೀಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಮೈಸೂರು, ಶಿವಮೊಗ್ಗ, ಮಂಡ್ಯ, ಹಾಸನ, ಬೆಂಗಳೂರು ಉತ್ತರ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಲು ಕಾಂಗ್ರೆಸ್ ಈಗಾಗಲೇ ಒಪ್ಪಿಕೊಂಡಿದೆ ಎಂದೂ ಹೇಳಲಾಗುತ್ತಿದೆ.