ರಾಜ್ಯದಲ್ಲಿ ಮತ್ತೊಂದು ಚುನಾವಣೆ! 63 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ಘೋಷಣೆ!!

ದೇಶದೆಲ್ಲೆಡೆ ಲೋಕಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರ ನಡುವೆಯೇ ರಾಜ್ಯದಲ್ಲಿ ಮತ್ತೊಂದು ಚುನಾವಣೆ ಎದುರಾಗಿದ್ದು. ರಾಜ್ಯದ 63 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕವನ್ನು  ರಾಜ್ಯ ಚುನಾವಣಾ ಆಯೋಗ ಘೋಷಣೆ ಮಾಡಿದೆ.

ad

ರಾಜ್ಯ ಚುನಾವಣಾ ಆಯುಕ್ತ ಪಿ.ಎಸ್.ಶ್ರೀನಿವಾಸಾಚಾರಿ ಅವರು ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಚುನಾವಣಾ ವೇಳಾಪಟ್ಟಿ ಬಿಡುಗಡೆ ಮಾಡಿದ್ದು, ಮೇ 29ರಂದು ಮತದಾನ ನಡೆಯಲಿದೆ. ಚುನಾವಣೆ ನಡೆಯುವ ಪ್ರದೇಶಗಳಲ್ಲಿ ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ. ಮೇ 31ರ ತನಕ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರಲಿದ್ದು, 63 ನಗರ ಸ್ಥಳೀಯ ಸಂಸ್ಥೆಗಳ 1361 ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆ.

ನ್ಯಾಯಾಲಯದಲ್ಲಿ ಪ್ರಕರಣ ಇರುವ 39 ನಗರ ಸ್ಥಳೀಯ ಸಂಸ್ಥೆಗಳನ್ನು ಹೊರತುಪಡಿಸಿ, ಈ ವರ್ಷ ಅವಧಿ ಮುಕ್ತಾಯಗೊಳ್ಳುತ್ತಿರುವ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿದೆ ಅಂತಾ ರಾಜ್ಯ ಚುನಾವಣಾ ಆಯುಕ್ತ ಪಿ.ಎನ್. ಶ್ರೀನಿವಾಸಾಚಾರಿ ತಿಳಿಸಿದ್ದಾರೆ.

ಮೇ 29ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.   63 ಸ್ಥಳೀಯ ಸಂಸ್ಥೆಗಳ 1,361 ವಾರ್ಡ್‌ಗಳಿಗೆ ಮೇ 29ರಂದು ಚುನಾವಣೆ ನಡೆಯಲಿದೆ. ಮೇ 31ರಂದು ಚುನಾವಣಾ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯುತ್ತಿರುವ ಕಾರಣ ಅಲ್ಲಿನ ಪಟ್ಟಣ ಪಂಚಾಯಿತಿಗೆ ಚುನಾವಣೆಯನ್ನು ನಡೆಸುತ್ತಿಲ್ಲ.

ಬೆಂಗಳೂರು ಮಹಾನಗರ ಪಾಲಿಕೆಯ ಸಗಾಯಿಪುರ, ಕಾವೇರಿಪುರ ವಾರ್ಡ್‌ಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ತುಮಕೂರು ಮಹಾನಗರ ಪಾಲಿಕೆಯ 22 ವಾರ್ಡ್‌ಗೆ ಸಹ ಮೇ 29ರಂದು ಉಪ ಚುನಾವಣೆ ನಡೆಯಲಿದೆ.

ಚುನಾವಣಾ ವೇಳಾಪಟ್ಟಿ
* ಮೇ 9ರಂದು ಚುನಾವಣಾ ಅಧಿಸೂಚನೆ ಪ್ರಕಟ
* ಮೇ 16 ನಾಮಪತ್ರ ಸಲ್ಲಿಕೆಗೆ ಕೊನೆ ದಿನ
* ಮೇ 17 ನಾಮಪತ್ರಗಳ ಪರಿಶೀಲನೆ
* ಮೇ 20 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ
* ಮೇ 29 ಮತದಾನ
* ಮೇ 31 ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಪ್ರಕಟ